ಬೆಂಗಳೂರು : ಪ ಶ್ಚಿಮಘಟ್ಟ ಕುರಿತಾದ ಕಸ್ತೂರಿರಂಗನ್ ಸಮಿತಿ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆ ಹಾಗೂ ರಾಜ್ಯದಲ್ಲಿ ತಲೆದೋರಿರುವ ಭೀಕರ ಬರ ಪರಿಸ್ಥಿತಿಯ ಕುರಿತು ಚರ್ಚಿಸಲು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ ಆರಂಭವಾಗಲಿದೆ.
ಸೆಪ್ಟೆಂಬರ್ 21ರಿಂದ 23ರವರೆಗೆ ನಡೆಯುವ ಈ ಅಧಿವೇಶನದಲ್ಲಿ ಕಸ್ತೂರಿರಂಗನ್ ವರದಿ ವಿರೋಧಿಸಿ ಒಮ್ಮತದ ನಿರ್ಣಯ ಕೈಗೊಳ್ಳುವ ಹಾಗೂ ಬರ ಪರಿಹಾರ ಕ್ರಮಗಳ ಕುರಿತು ಕೇಂದ್ರಕ್ಕೆ ನಿಯೋಗ ಕೊಂಡೊಯ್ಯುವ ಬಗ್ಗೆ ನಿರ್ಧಾರವಾಗುವ ಸಾಧ್ಯತೆಯಿದೆ.
ಈ ಮೂರು ದಿನಗಳ ಅಧಿವೇಶನದಲ್ಲಿ ಗ್ರಾಮೀಣ ಜನಜೀವನ ಹಾಗೂ ಕೃಷಿ ಕ್ಷೇತ್ರದ ಮೇಲಾಗಿರುವ ಬರದ ದುಷ್ಪರಿಣಾಮಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ. ಇದರ ಜೊತೆಗೆ, ಮಲೆನಾಡು ಹಾಗೂ ಕರಾವಳಿ ಭಾಗದ ಜನರ ಜೀವನ ಮತ್ತು ಆರ್ಥಿಕ ಚಟುವಟಿಕೆಗಳ ಮೇಲೆ ತೂಗುಗತ್ತಿಯಾಗಿರುವ ಡಾ. ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಸದನದಲ್ಲಿ ವಿಸ್ತೃತ ಮಂಥನ ನಡೆಸಿ, ಒಮ್ಮತದ ನಿರ್ಧಾರಕ್ಕೆ ಬರಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.