ಬೆಂಗಳೂರು : ರಾಜ್ಯ ಸರ್ಕಾರವು ಮತ್ತೆ ಬರಪೀಡಿತ ತಾಲೂಕುಗಳ ಪಟ್ಟಿಗೆ ಹೊಸದಾಗಿ 53 ತಾಲ್ಲೂಕು ಸೇರಿಸಿ ಆದೇಶ ಹೊರಡಿಸಿದೆ.
ಈ ಕುರಿತು ಡಿಸಿಎಂ ಡಾ.ಜಿ.ಪರಮೇಶ್ವರ್ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರಂತರವಾಗಿ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಲಾಗುತ್ತಿದ್ದು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಈ ಪೈಕಿ 51 ತಾಲೂಕುಗಳು ತೀವ್ರ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆಯಾಗಿದೆ ಎಂದು ಹೇಳಿದ್ದಾರೆ.
ಇದರ ಜೊತೆಗೆ, ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸ್ಥಿತಿ ಸೇರಿದಂತೆ ವಿವಿಧ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ 4ನೇ ಹಂತದಲ್ಲಿ 7 ಜಿಲ್ಲೆಗಳ 11 ತಾಲೂಕುಗಳು Step-3: Ground Truthingಗೆ ಅರ್ಹತೆ ಪಡೆದಿವೆ. ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಮತ್ತು ನಿಖರ ವರದಿಯ ಆಧಾರದಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
https://twitter.com/DrParameshwara/status/2102397259489104068?s=20
ಮುಂಗಾರು ಹಂಗಾಮು ಮುಗಿಯುವವರೆಗೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತದಲ್ಲಿಯೂ ಹೆಚ್ಚುವರಿ ತಾಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್‌ಗೆ ಸೇರಿಸಲಾಗುವುದು ಎಂದು ಹೇಳಿದ್ದಾರೆ.
ಬೆಳೆ ಹಾನಿಯ ನೈಜ ಚಿತ್ರಣ ಆಧರಿಸಿ, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನಿಯಮಾನುಸಾರ ಅಗತ್ಯ ನೆರವು ತಲುಪಿಸಲು ನಾವು ಬದ್ಧರಿದ್ದೇವೆ.