ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಗ್ರಾಮದ ಪ್ರಸಿದ್ಧ ಸಿಂದಲೇ ಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನಕ್ಕಾಗಿ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಮತ್ತು ದೊಣ್ಣೆಗಳಿಂದ ಸವರ್ಣೀಯರು ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಕುಟುಂಬವು ಸಿಂದಲೇ ಲಿಂಗೇಶ್ವರ ದೇಗುಲಕ್ಕೆ ಆಗಮಿಸಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಗುರುಸಣಗಿ ಗ್ರಾಮದ ಸವರ್ಣೀಯರ ಗುಂಪು ಇವರ ಮೇಲೆ ಏಕಾಏಕಿ ಹಲ್ಲೆ ನಡೆಸಿದೆ ಎನ್ನಲಾಗಿದೆ. ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಹಲ್ಲೆಯ ಭೀಕರ ದೃಶ್ಯಗಳು ಹಾಗೂ ಕಲ್ಲು-ದೊಣ್ಣೆಗಳಿಂದ ಆಕ್ರಮಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬ ನೀಡಿದ ದೂರಿನನ್ವಯ ವಡಗೇರಾ ಪೊಲೀಸ್ ಠಾಣೆಯಲ್ಲಿ 11 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.