ಕಾರವಾರ: ಕುಮಟಾ ತಾಲೂಕಿನ ದೇವಿಮನೆ ಘಟ್ಟದ ಮಾಸ್ತಿಹಳ್ಳದ ಬಳಿ ಗುರುವಾರ ರಾತ್ರಿ ಕೆಎಸ್‌ಆರ್‌ಟಿಸಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಉರುಳಿಬಿದ್ದ ಪರಿಣಾಮ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಬಸ್ ಬಾಗಲಕೋಟೆಯಿಂದ ಶಿರಸಿ ಮಾರ್ಗವಾಗಿ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಅಪಘಾತದ ತೀವ್ರತೆ ಹೆಚ್ಚಾಗಿದ್ದರೂ, ಅದೃಷ್ಟವಶಾತ್ ಯಾವುದೇ ಭಾರಿ ಪ್ರಾಣಹಾನಿ ಸಂಭವಿಸಿಲ್ಲ.
ಮಾಸ್ತಿಹಳ್ಳದ ಸಮೀಪದ ಕಡಿದಾದ ತಿರುವಿನಲ್ಲಿ ಸಾಗುತ್ತಿದ್ದ ವೇಳೆ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್ ರಸ್ತೆ ಬದಿಯಿಂದ ಕೆಳಕ್ಕೆ ಉರುಳಿ ಕಂದಕಕ್ಕೆ ಬಿದ್ದಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ 12 ಪ್ರಯಾಣಿಕರು ಗಾಯಗೊಂಡಿದ್ದು, ಬಸ್ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸ್ ಠಾಣೆಯ ಪಿಎಸ್‌ಐ ಖಾದರ್ ಹಾಗೂ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕಂದಕದಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಸ್ಥಳೀಯರ ನೆರವಿನೊಂದಿಗೆ ರಕ್ಷಿಸಿದ ಪೊಲೀಸರು, ಹೆಚ್ಚಿನ ಚಿಕಿತ್ಸೆಗಾಗಿ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.