ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಇಂದು ಸಂಜೆ ತನ್ನ ಪ್ರಮುಖ ಆದೇಶವನ್ನು ಪ್ರಕಟಿಸಲಿದೆ.
ಬಸನಗೌಡ ಪಾಟೀಲ್ ಹಾಗೂ ಮಂಜುನಾಥ್ ಎಂಬುವವರು ಸಲ್ಲಿಸಿದ್ದ ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು, ಕಾಯ್ದಿರಿಸಿದ್ದ ಆದೇಶವನ್ನು ಇಂದು ಹೊರಡಿಸಲಿದೆ. ನೇಮಕಾತಿ ಪ್ರಕ್ರಿಯೆಯಲ್ಲಿ ದೊಡ್ಡ ಮಟ್ಟದ ಅಕ್ರಮ ನಡೆದಿದ್ದು, ನಿಷ್ಪಕ್ಷಪಾತ ತನಿಖೆಗೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ. ಹೀಗಾಗಿ ಹೈಕೋರ್ಟ್ ನೀಡಲಿರುವ ತೀರ್ಪು ಕೆಪಿಎಸ್‌ಸಿ ಅಭ್ಯರ್ಥಿಗಳು ಹಾಗೂ ರಾಜ್ಯ ಸರ್ಕಾರಕ್ಕೆ ಅತ್ಯಂತ ಕುತೂಹಲಕಾರಿಯಾಗಿದೆ.