ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಅವರ ಅಳಿಯ ಶಂಕರಗೌಡ ವಿರುದ್ಧ ಭೂಮಿ ಕಬಳಿಕೆ ಆರೋಪದಡಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ಅಕ್ರಮವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿ ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ನೋಂದಾಯಿಸಲಾಗಿದೆ.
ವಿಶ್ವನಾಥ್ ಪಾಟೀಲ್ ಎಂಬುವವರು ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ. ದೂರಿನಲ್ಲಿ ಉಲ್ಲೇಖಿಸಿರುವಂತೆ, ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿದ್ದ 10 ಎಕರೆ 20 ಗುಂಟೆ ಜಮೀನನ್ನು ಅಕ್ರಮವಾಗಿ ಕಬಳಿಸಲಾಗಿದೆ. ದೂರುದಾರ ವಿಶ್ವನಾಥ್ ಅವರ ಮಲತಾಯಿ ಬಸಮ್ಮಗೌಡತಿಗೆ ಮಕ್ಕಳಿರಲಿಲ್ಲ. ಆದರೆ, ಶಿವಶಂಕರಪ್ಪ ಸಾಹುಕಾರ್ ತಮ್ಮ ಅಳಿಯ ಶಂಕರಗೌಡನನ್ನು ಬಸಮ್ಮಗೌಡತಿಯ ಮಗನೆಂದು ಸುಳ್ಳು ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಜಮೀನನ್ನು ತಮ್ಮ ಅಳಿಯನ ಹೆಸರಿಗೆ ವರ್ಗಾಯಿಸಿಕೊಂಡಿದ್ದರು.
ಅಷ್ಟೇ ಅಲ್ಲದೆ, ಜಮೀನು ಅಳಿಯ ಶಂಕರಗೌಡನ ಹೆಸರಿಗೆ ನೊಂದಾಯಿತಾದ ಕೆಲವೇ ದಿನಗಳಲ್ಲಿ ಶಿವಶಂಕರಪ್ಪ ಸಾಹುಕಾರ್ ಆ ಆಸ್ತಿಯನ್ನು ತಮ್ಮ ಹೆಸರಿಗೆ ಮಾಡಿಸಿಕೊಂಡಿದ್ದಾರೆ ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಈ ದೂರಿನ ಆಧಾರದ ಮೇಲೆ ಶಹಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.