ರಾಯಚೂರು : ಶಿಕ್ಷಣ ಇಲಾಖೆಯ ಪ್ರಥಮ ದರ್ಜೆ ಸಹಾಯಕ (FDA) ಒಬ್ಬರು ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಘಟನೆ ನಡೆದಿದೆ. ಖಾಸಗಿ ಶಾಲೆಯೊಂದರ ನವೀಕರಣ ಕೆಲಸ ಮಾಡಿಕೊಡುವುದಾಗಿ ಹೇಳಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇರೆಗೆ ದೂರು ದಾಖಲಾದ ನಂತರ ಲೋಕಾಯುಕ್ತ ಅಧಿಕಾರಿಗಳು ಬಲೆ ಬೀಸಿದ್ದರು.
ರಾಯಚೂರಿನ ಹೊಸ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಡಿಡಿಪಿಐ ಕಚೇರಿಯಲ್ಲೇ ದಾಳಿ ನಡೆದಿದ್ದು, ಎಫ್ ಡಿ ಎ ಮಹಾಬಲೇಶ್ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.
ಡಿಡಿಪಿಐ ಕಚೇರಿಯಲ್ಲಿ ದೂರುದಾರರಿಂದ ಮುಂಗಡವಾಗಿ 15,000 ಹಣ ಸ್ವೀಕರಿಸುತ್ತಿದ್ದ ವೇಳೆ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದು, ಲಂಚದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
ಲೋಕಾಯುಕ್ತ ಅಧಿಕಾರಿಗಳ ಈ ಕಾರ್ಯಾಚರಣೆ ಸಾರ್ವಜನಿಕ ವಲಯದಲ್ಲಿ ಮತ್ತೊಮ್ಮೆ ಭ್ರಷ್ಟಾಚಾರದ ವಿರುದ್ಧದ ಕ್ರಮಗಳಿಗೆ ಬಲ ತುಂಬಿದ್ದು, ಸರ್ಕಾರಿ ಕಚೇರಿಗಳಲ್ಲಿ ಲಂಚದ ವಿರುದ್ಧ ಕಠಿಣ ನಿಗಾ ಮುಂದುವರಿದಿದೆ.