ಬೆಂಗಳೂರು: ಕೆರೆಗೆ ವೈದ್ಯಕೀಯ ತ್ಯಾಜ್ಯ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಸೂಚನೆ ಮೇರೆಗೆ ವೈದ್ಯನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವೈದ್ಯರ ವಿರುದ್ಧ ಕೇಸು ದಾಖಲಾಗಿದೆ. ಯಂಟಗಾನಹಳ್ಳಿ ಗ್ರಾಮ ಪಂಚಾಯಿತಿಗೆ ಸಚಿವ ಈಶ್ವರ ಕಂಡ್ರೆ ಇತ್ತೀಚೆಗೆ ಭೇಟಿ ನೀಡಿದ್ದ ವೇಳೆ ಸಾರ್ವಜನಿಕರು ವೈದ್ಯಕೀಯ ತ್ಯಾಜ್ಯವನ್ನು ಕೆರೆಗೆ ಸುರಿದ ಬಗ್ಗೆ ಮಾಹಿತಿ ನೀಡಿದ್ದರು.
ಈ ವೇಳೆ ಸಚಿವರು ಸ್ಥಳ ಪರಿಶೀಲನೆ ನಡೆಸಿ ಕೇಸ್ ದಾಖಲಿಸುವಂತೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸೂಚನೆ ನೀಡಿದ್ದರು. ಸ್ಥಳ ಪರಿಶೀಲನೆ ನಡೆಸಿದ ತಾಪಂ ಇಒ ಡಾ.ಬಿಂದು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಪದ್ಮಿನಿ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಯಂಟಗಾನಹಳ್ಳಿ ಕೆರೆಗೆ ಬಳಸಿದ ಸಿರಿಂಜ್ ಗಳು, ರಕ್ತ ಸಿಕ್ತವಾಗಿದ್ದ ಹತ್ತಿ, ಬ್ಯಾಂಡೇಜ್ ಸೇರಿದಂತೆ ಹಲವು ವೈದ್ಯಕೀಯ ತ್ಯಾಜ್ಯಗಳನ್ನು ಸುರಿದಿರುವುದು ಪತ್ತೆಯಾಗಿತ್ತು. ಖಾಸಗಿ ಕ್ಲಿನಿಕ್ ವೈದ್ಯ ಡಾ. ಅರುಣ್ ಗಿರೀಶ್ ಸಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.