ಕಲಬುರಗಿ: ಜಿಲ್ಲೆಯ ಹೈಕೋರ್ಟ್ ಕ್ರಾಸ್ ಬಳಿ ಯಾವುದೇ ಮುನ್ಸೂಚನೆ ಹಾಗೂ ಪೂರ್ವಾನುಮತಿ ಇಲ್ಲದೆ ರಾತ್ರೋರಾತ್ರಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆಯನ್ನು ಸ್ಥಾಪಿಸಲಾಗಿದೆ. ಕಳೆದ ಎರಡು-ಮೂರು ವರ್ಷಗಳ ಹಿಂದಷ್ಟೇ ಈ ಪ್ರದೇಶಕ್ಕೆ 'ಸಿದ್ದರಾಮಯ್ಯ ಸರ್ಕಲ್' ಎಂದು ಹೆಸರಿಟ್ಟು, ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ಸಂದರ್ಭದಲ್ಲಿಯೇ ಸರ್ಕಲ್ ಎಂದು ಘೋಷಣೆ ಮಾಡಲಾಗಿತ್ತು. ಇದೀಗ ಅದೇ ಸ್ಥಳದಲ್ಲಿ ದಿಢೀರನೆ ಪ್ರತಿಮೆಯನ್ನು ನಿಲ್ಲಿಸಿರುವುದು ಸ್ಥಳೀಯವಾಗಿ ತೀವ್ರ ಕುತೂಹಲ ಹಾಗೂ ಚರ್ಚೆಗೆ ಗ್ರಾಸವಾಗಿದೆ.
ಸಂಬಂಧಿಸಿದ ಸ್ಥಳೀಯ ಆಡಳಿತ ಹಾಗೂ ಮಹಾನಗರ ಪಾಲಿಕೆಯಿಂದ ಯಾವುದೇ ರೀತಿಯ ಅಧಿಕೃತ ಅನುಮತಿ ಪಡೆಯದೆ ಈ ಪ್ರತಿಮೆ ಸ್ಥಾಪಿಸಲಾಗಿದೆ ಎಂದು ಹೇಳಲಾಗುತ್ತಿದ್ದು, ವಿಷಯ ತಿಳಿದು ಸ್ಥಳಕ್ಕೆ ಸಾರ್ವಜನಿಕರು ಹಾಗೂ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.