ಮಂಡ್ಯ: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ನಿವೃತ್ತ ಹಾಸ್ಟೆಲ್ ಅಧೀಕ್ಷಕ ಶಿವರಾಜು ಅವರ ಮನೆ ಹಾಗೂ ಫಾರ್ಮ್‌ಹೌಸ್ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸಿ, ಸೋಮನಹಳ್ಳಿ ಮತ್ತು ಬೆಸಗರಹಳ್ಳಿಯ ಹಾಸ್ಟೆಲ್‌ಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಶಿವರಾಜು ಕಳೆದ ತಿಂಗಳಷ್ಟೇ ಸೇವೆಯಿಂದ ನಿವೃತ್ತರಾಗಿದ್ದರು. ಮದ್ದೂರಿನ ಕೊಲ್ಲಿ ವೃತ್ತದ ಬಳಿ ಇರುವ ವಿನಾಯಕ ಬಡಾವಣೆಯಲ್ಲಿರುವ ಅವರ ಮನೆ ಹಾಗೂ ಫಾರ್ಮ್‌ಹೌಸ್ ಮೇಲೆ ಅಧಿಕಾರಿಗಳು ಬಲೆ ಬೀಸಿದ್ದು, ಪರಿಶೀಲನೆ ಮುಂದುವರಿಸಿದ್ದಾರೆ.
ಈ ಭರ್ಜರಿ ಕಾರ್ಯಾಚರಣೆಯ ವೇಳೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಅಪಾರ ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳು ಪತ್ತೆಯಾಗಿವೆ. ಅಷ್ಟೇ ಅಲ್ಲದೆ, ಶಿವರಾಜು ತಮ್ಮ ಫಾರ್ಮ್‌ಹೌಸ್‌ನಲ್ಲಿ ಮಿನಿ ಬಾರ್ ಮಾದರಿಯಲ್ಲೇ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಶೇಖರಿಸಿಟ್ಟಿರುವುದು ಕಂಡುಬಂದಿದೆ. ಅತ್ಯಂತ ದಿಗ್ಭ್ರಮೆ ಹುಟ್ಟಿಸುವ ಸಂಗತಿಯೆಂದರೆ, ಹಾಸ್ಟೆಲ್‌ನಲ್ಲಿರುವ ಬಡ ಮಕ್ಕಳಿಗೆ ವಿತರಿಸಬೇಕಿದ್ದ ಸರ್ಕಾರಿ ಪಠ್ಯಪುಸ್ತಕಗಳು, ಹಾಸಿಗೆ ಹಾಗೂ ಬೆಡ್‌ಶೀಟ್‌ಗಳನ್ನು ಶಿವರಾಜು ತಮ್ಮ ಖಾಸಗಿ ಫಾರ್ಮ್‌ಹೌಸ್‌ನಲ್ಲಿ ಅಕ್ರಮವಾಗಿ ಬಚ್ಚಿಟ್ಟಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ. ಮಂಡ್ಯ ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ಹಾಗೂ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಬ್ಯಾಟರಾಯಗೌಡ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಸಿಕ್ಕಿರುವ ಆಸ್ತಿ-ಪಾಸ್ತಿಗಳ ದಾಖಲೆಗಳನ್ನು ಹಾಗೂ ವಸ್ತುಗಳನ್ನು ವಶಕ್ಕೆ ಪಡೆದು ತೀವ್ರ ತನಿಖೆ ನಡೆಸುತ್ತಿದ್ದಾರೆ.