ಬೆಂಗಳೂರು : ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ಗಂಭೀರ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಹಾಗೂ ಅವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸೆ.26ರಂದು ಆಯೋಜಿಸಿರುವ ಬೃಹತ್ ಪ್ರತಿಭಟನೆಗೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಬೆಂಬಲ ಸೂಚಿಸಿದೆ.
SIR ಪ್ರಕ್ರಿಯೆಯ ವಿವಿಧ ನಿರ್ಧಾರಗಳಿಗೆ ಸಂಬಂಧಿಸಿದಂತೆ ಇಬ್ಬರು ಚುನಾವಣಾ ಆಯುಕ್ತರು ಕಳೆದ 10 ತಿಂಗಳಲ್ಲಿ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ವರದಿ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ರೀತಿಯ ಏಕಪಕ್ಷೀಯವಾದ ನಿರ್ಧಾರಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿವೆ ಆದಕಾರಣ, ಯುವ ಕಾಂಗ್ರೆಸ್ ಕೆಪಿಸಿಸಿ ಜೊತೆಗೂಡಿ ಸೆಪ್ಟೆಂಬರ್ 26ರಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ.
ಪ್ರಸ್ತುತ, ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ, ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯ ಕುರಿತು ಸ್ವತಂತ್ರ ತನಿಖೆ ಅಗತ್ಯವಾಗಿದೆ. ಈ ವಿಚಾರವಾಗಿ ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ, ಬಂಧನ ಮತ್ತು ಸ್ವತಂತ್ರ ಪರಿಶೀಲನೆಗೆ ಒತ್ತಾಯಿಸಿದೆ.
ಪ್ರತಿಭಟನೆಯಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ್ ಗೌಡ ಪಾಲ್ಗೊಳ್ಳಲಿದ್ದು, ನೂರಾರು ಯುವ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿ ಪ್ರತಿಭಟನೆಗೆ ಬೆಂಬಲ ನೀಡಲಿದ್ದಾರೆ.