ಮಂಡ್ಯ: ಚುನಾವಣಾ ಅಫಿಡವಿಟ್‌ನಲ್ಲಿ ಆಸ್ತಿ ವಿವರ ಮುಚ್ಚಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಶ್ರೀರಂಗಪಟ್ಟಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಅವರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿ ಮಾಡಿದ್ದು, ಅವರ ಶಾಸಕ ಸ್ಥಾನಕ್ಕೆ ಕುತ್ತು ಬರುವ ಭೀತಿ ಎದುರಾಗಿದೆ.
ಮೈಸೂರು ಮೂಲದ ಆದೀಶ್ ಸಾಗರ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ರಾಮನಾಥ್ ಹೆಗಡೆ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ.
ಏನಿದು ಪ್ರಕರಣ?:
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವ ಅಧಿಕೃತ ಅಫಿಡವಿಟ್‌ನಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ತಮ್ಮ ನೈಜ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂದು ಆರೋಪಿಸಿ ಆದೀಶ್ ಸಾಗರ್ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ದಾಖಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು, ಆರೋಪಗಳ ಕುರಿತು ವಿವರಣೆ ನೀಡುವಂತೆ ಸೂಚಿಸಿ ಶಾಸಕರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ.
ಶಾಸಕ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ:
ಚುನಾವಣಾ ಆಯೋಗದ ನಿಯಮಾವಳಿಗಳ ಪ್ರಕಾರ ಸ್ಪರ್ಧಾಳುಗಳು ತಮ್ಮ ಚರ-ಸ್ಥಿರ ಆಸ್ತಿ, ಸಾಲ ಹಾಗೂ ಅಪರಾಧ ಹಿನ್ನೆಲೆಯ ಸಂಪೂರ್ಣ ವಿವರಗಳನ್ನು ಅಫಿಡವಿಟ್‌ನಲ್ಲಿ ಕಡ್ಡಾಯವಾಗಿ ನಮೂದಿಸಬೇಕಾಗುತ್ತದೆ. ಒಂದು ವೇಳೆ ನ್ಯಾಯಾಲಯದ ವಿಚಾರಣೆಯಲ್ಲಿ ಶಾಸಕರು ಉದ್ದೇಶಪೂರ್ವಕವಾಗಿ ಆಸ್ತಿ ವಿವರ ಮುಚ್ಚಿಟ್ಟಿರುವುದು ಸಾಬೀತಾದರೆ, ಅವರ ಶಾಸಕ ಸ್ಥಾನ ರದ್ದಾಗುವ ಸಾಧ್ಯತೆಯೂ ಇದ್ದು, ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ವರದಿ: ಗಿರೀಶ್ ರಾಜ್, ಮಂಡ್ಯ