ಮೈಸೂರು: ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆಲಗೂಡು ಗ್ರಾಮದ ನಿವಾಸಿ ಸುಭಾಷ್ (35) ಕೊಲೆಯಾದ ದುರ್ದೈವಿ. ಹಂತಕರು ಸುಭಾಷ್‌ಗೆ ಸತತವಾಗಿ ಮಾರಕಾಸ್ತ್ರಗಳಿಂದ ಇರಿದು ಸ್ಥಳದಲ್ಲೇ ಹೆಣವಾಗಿಸಿ ಪರಾರಿಯಾಗಿದ್ದಾರೆ. ಈ ರಕ್ತಸಿಕ್ತ ಘಟನೆಯಿಂದಾಗಿ ಸ್ಥಳೀಯ ಗ್ರಾಮಸ್ಥರು ಹಾಗೂ ಸಾರ್ವಜನಿಕರಲ್ಲಿ ತೀವ್ರ ಆತಂಕ ಮತ್ತು ಭೀತಿ ಆವರಿಸಿದೆ.
ಘಟನೆ ನಡೆದ ವಿಷಯ ತಿಳಿದ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಟಿ.ನರಸೀಪುರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಕೊಲೆಗೆ ನಿಖರವಾದ ಕಾರಣ ಹಾಗೂ ಹಂತಕರ ಸುಳಿವು ಇನ್ನೂ ತಿಳಿದುಬಂದಿಲ್ಲ. ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.