ಬೆಂಗಳೂರು: ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿರುವ ದುಃಖಕರ ಘಟನೆ ನಡೆದಿದೆ. ಮೃತರನ್ನು ಗಣೇಶ್ ಸುಬ್ಬಣ್ಣ ಎಂದು ಗುರುತಿಸಲಾಗಿದೆ.
ಕೊಲ್ಕತ್ತಾದಿಂದ ಬೆಂಗಳೂರಿಗೆ ಆಗಮಿಸಿದ್ದ ಇವರು, ವಿಮಾನ ನಿಲ್ದಾಣದ ಲಾಂಜ್ ಬಳಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರಾದರೂ, ಮಾರ್ಗಮಧ್ಯದಲ್ಲೇ ಗಣೇಶ್ ಸುಬ್ಬಣ್ಣ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.