ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಲಯದಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಪ್ರದೋಷ್‌ನನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಿ ವಿಚಾರಣೆ ನಡೆಸುವುದನ್ನು ಮುಂದೂಡಬೇಕು ಎಂದು ಕೋರಿ ದರ್ಶನ್ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯವು ವಜಾಗೊಳಿಸಿದೆ.
ಪ್ರಕರಣದ ವಿಚಾರಣೆ ವೇಳೆ ದರ್ಶನ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ಹಾಗೂ ಹಷ್ಮತ್ ಪಾಷಾ ತಂಡ, ಪ್ರದೋಷ್‌ನ ಮಾಫಿ ಸಾಕ್ಷಿ ವಿಚಾರಣೆಯನ್ನು ಸದ್ಯಕ್ಕೆ ಮುಂದೂಡಬೇಕು ಎಂದು ಕೋರ್ಟ್‌ಗೆ ಮನವಿ ಮಾಡಿತ್ತು. ಆದರೆ ಈ ಮನವಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ನ್ಯಾಯಾಲಯವು ಅರ್ಜಿಯನ್ನು ವಜಾ ಮಾಡಿದೆ.
ಸೆಪ್ಟೆಂಬರ್ 28ಕ್ಕೆ ವಿಚಾರಣೆ ಫಿಕ್ಸ್:
ಅರ್ಜಿ ವಜಾಗೊಂಡ ಬೆನ್ನಲ್ಲೇ, ಈ ಹಿಂದೆ ನಿಗದಿಯಾಗಿದ್ದ ದಿನಾಂಕದಂತೆಯೇ ಸೆಪ್ಟೆಂಬರ್ 28ರಂದು ಪ್ರದೋಷ್‌ನ ಮಾಫಿ ಸಾಕ್ಷ್ಯದ ಕುರಿತ ವಿಚಾರಣೆ ಮುಂದುವರಿಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಪ್ರದೋಷ್ ಮಾಫಿ ಸಾಕ್ಷಿಯಾಗುವುದರಿಂದ ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಕಾನೂನು ಕುಣಿಕೆ ಮತ್ತಷ್ಟು ಬಿಗಿಯಾಗುವ ಆತಂಕ ಎದುರಾಗಿದ್ದು, ವಿಚಾರಣೆಯ ಮುಂದಿನ ಹಂತ ತೀವ್ರ ಕುತೂಹಲ ಮೂಡಿಸಿದೆ.