ಬೆಂಗಳೂರು: ಗಣೇಶೋತ್ಸವದ ಸಂದರ್ಭದಲ್ಲಿ ಅನ್ನದಾನ ಕಾರ್ಯಕ್ರಮದಲ್ಲಿ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಲ್ಲೇಶ್ವರಂನಲ್ಲಿ ನಡೆದ ಘಟನೆಯನ್ನು ಖಂಡಿಸಿ ಸ್ಥಳೀಯ ನಿವಾಸಿಗಳು ಶಾಸಕ ಮುನಿರತ್ನ ಅವರ ಮನೆಯ ಎದುರು ದಿಢೀರ್ ಧರಣಿ ಕುಳಿತು ತಮ್ಮ ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲದೆ, ಶಾಸಕರ ಕಾರನ್ನು ತಡೆದು ನಿಲ್ಲಿಸಿದ ಪ್ರತಿಭಟನಾಕಾರರು ಅವರ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಘಟನೆಯಿಂದಾಗಿ ಶಾಸಕರ ನಿವಾಸದ ಬಳಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕೆ.ಎಸ್.ಆರ್.ಪಿ (KSRP) ತುಕಡಿಯನ್ನು ಶಾಸಕರ ಮನೆ ಬಳಿ ನಿಯೋಜಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸದ್ಯ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿರುವ ಪೊಲೀಸ್ ಸಿಬ್ಬಂದಿ, ಸ್ಥಳದಲ್ಲಿದ್ದ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.