LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕುವೆಂಪು ವಿವಿಯಲ್ಲಿ ವನ್ಯಜೀವಿ ಸಪ್ತಾಹ: ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ; ಸಮದ್ ಕೊಟ್ಟೂರು

ಶಿವಮೊಗ್ಗ: ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ ಯುವಜನರಿಗೆ ಇಂದು ಸಾಕಷ್ಟು ಅವಕಾಶಗಳಿವೆ. ವನ್ಯಜೀವಿ ಮತ್ತು ಜೀವವೈವಿಧ್ಯತೆಯ ಸಂರಕ್ಷಣೆಗೆ ಸರ್ಕಾರವನ್ನು ಅವಲಂಬಿಸದೆ, ವಿದ್ಯಾರ್ಥಿಗಳು ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಈ ಕ್ಷೇತ್ರಗಳನ್ನು ವೃತ್ತಿಯನ್ನಾಗಿ ಆಯ್ಕೆ ಮಾಡಿಕೊಂಡು ಸಂರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ ಎಂದು ಖ್ಯಾತ ವನ್ಯಜೀವಿ ಸಂರಕ್ಷಕ ಸಮದ್ ಕೊಟ್ಟೂರು ಕರೆ ನೀಡಿದರು.

ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿಯ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗ ಹಾಗೂ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವಲಯದ ಸಹಯೋಗದಲ್ಲಿ ಸೋಮವಾರ ಪ್ರಾರಂಭವಾದ ‘ವನ್ಯಜೀವಿ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕುಲಸಚಿವ ಪ್ರೊ. ಆರ್. ತಿಮ್ಮರಾಯಪ್ಪ ಮಾತನಾಡಿ, ದೇಶದ ಅರಣ್ಯ ಮತ್ತು ವನ್ಯಜೀವಿ ಕ್ಷೇತ್ರದಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದರು. ವಿದ್ಯಾರ್ಥಿಗಳು ಯುಪಿಎಸ್‌ಸಿ ಮೂಲಕ ಭಾರತೀಯ ಅರಣ್ಯ ಸೇವೆ (IFS) ಹಾಗೂ ಕೆಪಿಎಸ್‌ಸಿ ಮೂಲಕ ಕರ್ನಾಟಕ ಅರಣ್ಯ ಸೇವೆ ಸೇರಿದಂತೆ ಅರಣ್ಯ ಇಲಾಖೆಯ ವಿವಿಧ ಹುದ್ದೆಗಳಿಗೆ ಸ್ಪರ್ಧಿಸಿ ವನ್ಯಜೀವಿ ಸಂರಕ್ಷಣೆಯನ್ನು ವೃತ್ತಿಜೀವನದ ಒಂದು ಪ್ರಮುಖ ಕ್ಷೇತ್ರವಾಗಿ ಪರಿಗಣಿಸುವಂತೆ ಕರೆ ನೀಡಿದರು.

ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ಅಧ್ಯಕ್ಷ ಪ್ರೊ. ವಿಜಯಕುಮಾರ ಮಾತನಾಡಿ, ವನ್ಯಜೀವಿ ಸಂರಕ್ಷಣೆ ಕೇವಲ ಅರಣ್ಯ ಇಲಾಖೆ ಅಥವಾ ಕೆಲವೇ ಕೆಲವು ಸಂಘ-ಸಂಸ್ಥೆಗಳ ಹೊಣೆಗಾರಿಕೆಯಲ್ಲ. ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಸಂರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಭವಿಷ್ಯದ ವನ್ಯಜೀವಿ ಸಂರಕ್ಷಣೆಗೆ ಬಲ ದೊರೆಯಲಿದೆ ಎಂದು ಅಭಿಪ್ರಾಯಪಟ್ಟರು. 

ಸೂಕ್ಷ್ಮಜೀವಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ. ತಿಪ್ಪೇಸ್ವಾಮಿ ಮಾತನಾಡಿ, "ಆವಾಸ ಸ್ಥಾನದ ಸಂಪರ್ಕ, ಸಮೃದ್ಧ ವನ್ಯಜೀವಿ” ಎಂಬ ಈ ವರ್ಷದ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಆಶಯವನ್ನು ಉಲ್ಲೇಖಿಸಿಸುತ್ತಾ, ವನ್ಯಜೀವಿಗಳ ಉಳಿವಿಗೆ ಸೂಕ್ತ ಆವಾಸಸ್ಥಾನಗಳ ಸಂರಕ್ಷಣೆ ಹಾಗೂ ಅವುಗಳ ನಡುವಿನ ಸಂಪರ್ಕವನ್ನು ಕಾಪಾಡುವುದು ಅತ್ಯಂತ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನರಲ್ಲಿ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಲಕ್ಕವಳ್ಳಿ ವಲಯದ ವಲಯ ಅರಣ್ಯಾಧಿಕಾರಿ ಶ್ರೀ ಸಂತೋಷ್ ಸುರಿಮಠ ಹಾಗೂ ಉಪ ವಲಯ ಅರಣ್ಯಾಧಿಕಾರಿ ಶ್ರೀ ಪರಶುರಾಮ್ ಸಿ. ಎಸ್, ಪರಿಸರ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಬಸವರಾಜಪ್ಪ, ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಅಧ್ಯಕ್ಷ ಡಾ. ಎಚ್. ಎಸ್. ಶ್ರೀಶೈಲ, ಸೇರಿದಂತೆ ವಿಶ್ವವಿದ್ಯಾಲಯದ ಅಧ್ಯಾಪಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ಅರಿವು ಜಾಥಾ: ವನ್ಯಜೀವಿ ಸಪ್ತಾಹದ ಅಂಗವಾಗಿ ಜೀವವಿಜ್ಞಾನ ವಿಭಾಗಗಳ ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ವನ್ಯಜೀವಿ ಸಂರಕ್ಷಣಾ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡರು. ವನ್ಯಜೀವಿ ಮತ್ತು ಅವುಗಳ ಆವಾಸಸ್ಥಾನಗಳ ಸಂರಕ್ಷಣೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಾಥಾ ನಡೆಸಲಾಯಿತು.

ವನ್ಯಜೀವಿ ಮತ್ತು ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ಪ್ರದರ್ಶಿಸಿದ ‘ಒನ್ ಹೆಲ್ತ್’ (One Health) ಪರಿಕಲ್ಪನೆಯನ್ನು ಆಧರಿಸಿದ ಬೀದಿ ನಾಟಕವು ಕಾರ್ಯಕ್ರಮದ ಮತ್ತೊಂದು ಪ್ರಮುಖ ಆಕರ್ಷಣೆಯಾಗಿದ್ದು, ಮಾನವ ಆರೋಗ್ಯ, ಪ್ರಾಣಿಗಳ ಆರೋಗ್ಯ ಮತ್ತು ಪರಿಸರದ ಆರೋಗ್ಯ ಪರಸ್ಪರ ಸಂಬಂಧ ಹೊಂದಿವೆ ಎಂಬ ಸಂದೇಶವನ್ನು ಸಾರಿತು.

ಅ. 5 ರಿಂದ 9 ರವರೆಗೆ ನಡೆಯಲಿರುವ ವನ್ಯಜೀವಿ ಸಪ್ತಾಹದಲ್ಲಿ ವಿದ್ಯಾರ್ಥಿಗಳು, ಸಂಶೋಧಕರು, ಅಧ್ಯಾಪಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯನ್ನು ಒಳಗೊಂಡಂತೆ ವಿವಿಧ ವಿಶೇಷ ಉಪನ್ಯಾಸಗಳು ಮತ್ತು ಸಂರಕ್ಷಣಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.

Author
All About Belagavi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಸೊರಬದ ಚಂದ್ರಗುತ್ತಿಯಲ್ಲಿ ಶರನ್ನವರಾತ್ರಿ ಹಾಗೂ ವಿಜಯದಶಮಿ ಉತ್ಸವ ಆರಂಭBIG NEWS : ಭಕ್ತರ ಗಮನಕ್ಕೆ : ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕ ದರ್ಶನಕ್ಕೆ ಬ್ರೇಕ್!BREAKING : ಬೆಳಗಾವಿಯಲ್ಲಿ 40ಕ್ಕೂ ಹೆಚ್ಚು ಪಬ್ ಗಳ ಮೇಲೆ ಪೊಲೀಸರಿಂದ ರೇಡ್ : ದಾಳಿ ವೇಳೆ ಅಪ್ರಾಪ್ತರು ಪತ್ತೆ!BREAKING: 'ಗೃಹಜ್ಯೋತಿ' ಯೋಜನೆ ಮರುಪರಿಶೀಲನೆ ಗಡುವು ಅಕ್ಟೋಬರ್ 31ರವರೆಗೆ ವಿಸ್ತರಣೆ : ಇಂಧನ ಇಲಾಖೆ ಆದೇಶ!BIG NEWS : ಮನೆ ಮತ್ತು ಹೋಟೆಲ್ ಬಳಕೆಯ ತ್ಯಾಜ್ಯ ಎಣ್ಣೆ ಸಂಗ್ರಹಕ್ಕೆ ಹೊಸ ಮೊಬೈಲ್ ಆ್ಯಪ್ : ಸಚಿವ ಯುಟಿ ಖಾದರ್BIG NEWS : ಇಂದಿನಿಂದ ರಾಜ್ಯಾದ್ಯಂತ ಶರನ್ನವರಾತ್ರಿ ಆಚರಣೆBREAKING : ಸಂಕಷ್ಟದಲ್ಲಿರೋ ಸಾರಿಗೆ ನಿಗಮಗಳಿಗೆ ಹಣ ಬಿಡುಗಡೆ : 594 ಕೋಟಿ ಸಹಾಯಧನ ನೀಡಿದ ರಾಜ್ಯ ಸರ್ಕಾರBREAKING : ವಿಶ್ವ ವಿಖ್ಯಾತ ಮೈಸೂರು ದಸರಾಗೆ ಇಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಚಾಲನೆ!‘ದೆಹಲಿಯಲ್ಲಿ ಅರಾಜಕತೆ ಸೃಷ್ಟಿಸಲು ದೊಡ್ಡ ಪಿತೂರಿ’: ಸಿಜೆಪಿ ಪ್ರತಿಭಟನೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿಸಾಗರದ ಕಲ್ಮನೆ–ಎಡಜಿಗಳಮನೆ ತಾಲ್ಲೂಕು ಪಂಚಾಯ್ತಿ ಕ್ಷೇತ್ರ: ಬಿಜೆಪಿಯಿಂದ 'ಸುರೇಶ್ ಶೆಟ್ಟಿ' ಸ್ಪರ್ಧೆ?