ಬೆಂಗಳೂರು: ರಾಜ್ಯದಲ್ಲಿನ ಅರಣ್ಯ ಪ್ರದೇಶವನ್ನು ಯಾವುದೇ ಖಾಸಗಿ ವ್ಯಕ್ತಿಯ ಪರವಾಗಿ ಮಂಜೂರು ಮಾಡುವುದಕ್ಕೆ ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಮುಮ್ಮಡಿಕಾವಲ್ ಗ್ರಾಮದ ಅರಣ್ಯ ಭೂಮಿಯಲ್ಲಿನ ಜಮೀನನ್ನು ಪೋಡಿ ಮತ್ತು ದುರಸ್ತಿ ಮಾಡಲು ತಹಶೀಲ್ದಾರ್‌ಗೆ ನಿರ್ದೇಶಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ರದ್ದುಗೊಳಿಸಿ ವಿಭಾಗೀಯ ಪೀಠವು ಈ ಮಹತ್ವದ ತೀರ್ಪು ನೀಡಿದೆ.
ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ರಿಟ್ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್. ಶಾಂತಿಭೂಷಣ್ ಅವರಿದ್ದ ವಿಭಾಗೀಯ ಪೀಠವು ಈ ಆದೇಶವನ್ನು ಹೊರಡಿಸಿದೆ. ವಿವಾದಿತ ಜಮೀನು ಅರಣ್ಯ ಭೂಮಿಯಾಗಿದ್ದು, ಅದನ್ನು ಅರಣ್ಯೇತರ ಭೂಮಿಯನ್ನಾಗಿ ಪರಿವರ್ತಿಸಲಾಗಿದೆ ಎಂಬುದಕ್ಕೆ ಯಾವುದೇ ಅಧಿಕೃತ ದಾಖಲೆಗಳಿಲ್ಲ. ಇಂತಹ ಸನ್ನಿವೇಶದಲ್ಲಿ ಅರಣ್ಯ ಜಮೀನನ್ನು ಯಾವುದೇ ವ್ಯಕ್ತಿಯ ಪರವಾಗಿ ಮಂಜೂರು ಮಾಡುವ ಅಥವಾ ಅವರ ಹೆಸರಿಗೆ ಖಾತೆ ಮಾಡಿಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಪೀಠವು ಅಭಿಪ್ರಾಯಪಟ್ಟಿದೆ.
ವಿವಾದಿತ ಜಮೀನಿನ ಹಿನ್ನೆಲೆಯನ್ನು ಉಲ್ಲೇಖಿಸಿದ ನ್ಯಾಯಪೀಠ, ಮೈಸೂರು ಮಹಾರಾಜರು ತಮ್ಮ ಆಡಳಿತಾವಧಿಯಲ್ಲಿ, ಅಂದರೆ 1941ರ ಮೇ 1ರಂದು 'ಮೈಸೂರು ಅರಣ್ಯ ಕಾಯ್ದೆ–1900'ರ ಕಲಂ 17ರ ಅನುಸಾರ ಮುಮ್ಮಡಿಕಾವಲ್ ಪ್ರದೇಶದ ಒಟ್ಟು 1,112 ಎಕರೆ 27 ಗುಂಟೆ ಜಮೀನನ್ನು ಅರಣ್ಯ ಭೂಮಿ ಎಂದು ಅಧಿಕೃತವಾಗಿ ಘೋಷಿಸಿದ್ದಾರೆ. ಹೀಗಿರುವಾಗ, ಈ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಸಾಗುವಳಿದಾರರಿಗೆ ಜಮೀನು ಮಂಜೂರು ಮಾಡಲಾಗಿದೆ ಎಂಬ ವಾದವನ್ನು ಒಪ್ಪಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತೀಕ್ಷ್ಣವಾಗಿ ಹೇಳಿದೆ.
ದೇಶಾದ್ಯಂತ ಅರಣ್ಯ ಭೂಮಿ ಸಂರಕ್ಷಣೆಗೆ ಸಂಬಂಧಿಸಿದಂತೆ 'ಟಿ. ಎನ್. ಗೋದಾವರ್ಮನ್ ತಿರುಮುಲ್ಪಾಡ್ ವಿರುದ್ಧ ಯೂನಿಯನ್ ಆಫ್ ಇಂಡಿಯಾ' ಪ್ರಕರಣದ ವಿಚಾರಣೆ ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ. ಆದ್ದರಿಂದ ಅರ್ಜಿದಾರರು ತಮ್ಮ ಕುಂದುಕೊರತೆ ಅಥವಾ ಸೂಕ್ತ ಪರಿಹಾರಕ್ಕಾಗಿ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಬಹುದು ಎಂದು ವಿಭಾಗೀಯ ಪೀಠ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ: ಪಿರಿಯಾಪಟ್ಟಣ ತಾಲೂಕಿನ ಕಸಬಾ ಹೋಬಳಿ ಮುಮ್ಮಡಿಕಾವಲ್ ಗ್ರಾಮದ ವಿವಿಧ ಸರ್ವೇ ನಂಬರ್‌ಗಳಲ್ಲಿ ತಾವು ಸಾಗುವಳಿ ಮಾಡುತ್ತಿರುವ ಜಮೀನಿನ ಪೋಡಿ ಮತ್ತು ದುರಸ್ತಿಯನ್ನು ಆರು ತಿಂಗಳೊಳಗೆ ಮಾಡಲು ಮೈಸೂರು ಜಿಲ್ಲಾಡಳಿತಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಪಿ.ವೈ. ಮಲ್ಲೇಶ್ ಎಂಬುವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಅರ್ಜಿದಾರರ ಮನವಿಯನ್ನು ಪರಿಗಣಿಸಿ ಕಾನೂನಿನಂತೆ ಕ್ರಮ ಕೈಗೊಳ್ಳಲು ತಹಶೀಲ್ದಾರ್ ಹಾಗೂ ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚಿಸಿತ್ತು. ಈ ಆದೇಶವನ್ನು ವಿರೋಧಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿ, ಇದೀಗ ಯಶಸ್ಸು ಪಡೆದಿದ್ದಾರೆ.