ಬೆಂಗಳೂರು: ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಚಿವ ಲಕ್ಷ್ಮಣ ಸವದಿ ಅವರನ್ನು ಆರೋಪಿಯನ್ನಾಗಿ ಮಾಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ಮಧ್ಯಂತರ ತಡೆ ನೀಡಿದೆ. 2018ರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದ್ದ ಅಂಬಿಗರ ಚೌಡಯ್ಯ ಸಮುದಾಯ ಭವನದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅನುದಾನದ ಕುರಿತು ಪ್ರಶ್ನಿಸಿದ್ದ ವ್ಯಕ್ತಿಯೊಬ್ಬರ ಮೇಲೆ ಲಕ್ಷ್ಮಣ ಸವದಿ ಅವರ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.
ಆರಂಭಿಕ ಎಫ್‌ಐಆರ್ ಹಾಗೂ ಚಾರ್ಜ್‌ಶೀಟ್‌ನಲ್ಲಿ ಸವದಿ ಅವರ ಹೆಸರು ಇರಲಿಲ್ಲವಾದರೂ, ಇತ್ತೀಚೆಗೆ ದೂರುದಾರರು ನೀಡಿದ ಹೆಚ್ಚುವರಿ ಸಾಕ್ಷ್ಯಗಳನ್ನು ಆಧರಿಸಿ ಸವದಿ ಅವರನ್ನು ಈ ಪ್ರಕರಣದ ಆರೋಪಿಯನ್ನಾಗಿ ಸೇರಿಸಲು ವಿಚಾರಣಾ ನ್ಯಾಯಾಲಯ ಅನುಮತಿ ನೀಡಿತ್ತು. ವಿಚಾರಣಾ ನ್ಯಾಯಾಲಯದ ಈ ಆದೇಶವನ್ನು ಪ್ರಶ್ನಿಸಿ ಲಕ್ಷ್ಮಣ ಸವದಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಸಚಿವರ ವಿರುದ್ಧದ ವಿಚಾರಣೆಗೆ ತಡೆ ನೀಡಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಉಳಿದ 17 ಆರೋಪಿಗಳ ವಿರುದ್ಧದ ನ್ಯಾಯಾಂಗ ಪ್ರಕ್ರಿಯೆಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದೆ.