ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಹಾಗೂ ಪೆನ್‌ಡ್ರೈವ್ ಪತ್ತೆಯಾದ ಹಿನ್ನೆಲೆಯಲ್ಲಿ, ಅವರನ್ನು ತಕ್ಷಣವೇ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಿ ಕಾರಾಗೃಹ ಮತ್ತು ಆಡಳಿತ ಸುಧಾರಣೆ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಜೈಲಿನೊಳಗೆ ನಿಷೇಧಿತ ವಿದ್ಯುನ್ಮಾನ ಉಪಕರಣಗಳು ಪತ್ತೆಯಾಗಿರುವುದು ಭದ್ರತಾ ಲೋಪವನ್ನು ಎತ್ತಿಹಿಡಿದಿದ್ದು, ಈ ಸಂಬಂಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಇದ್ದ ಸೆಲ್‌ನಲ್ಲಿ ದಿಢೀರ್ ತನಿಖೆ ನಡೆಸಿದ ವೇಳೆ ಮೊಬೈಲ್ ಹಾಗೂ ಪೆನ್‌ಡ್ರೈವ್ ಸಿಕ್ಕಿಬಿದ್ದಿದೆ. ಈ ಗಂಭೀರ ಪ್ರಕರಣವನ್ನು ಪರಿಗಣಿಸಿದ ಇಲಾಖೆಯ ಉನ್ನತಾಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ ಹಾಗೂ ಹೆಚ್ಚಿನ ಭದ್ರತೆಯ ಹಿತದೃಷ್ಟಿಯಿಂದ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅತ್ಯಂತ ಸುರಕ್ಷಿತವೆನಿಸಿದ ಬೆಳಗಾವಿಯ ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡಲು ಸೂಚಿಸಿದ್ದಾರೆ.