ನವದೆಹಲಿ: ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ 'ಸಿಜೆಪಿ' ಪ್ರತಿಭಟನೆಯ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ಎಲ್ಲಾ ರಾಜ್ಯಗಳಿಗೂ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದು, ರಾಜ್ಯಗಳಲ್ಲೂ ಇಂತಹ ಆಂದೋಲನಗಳು ಗಲಭೆಗಳಿಗೆ ತಿರುಗುವುದನ್ನು ತಡೆಯಲು ಮುನ್ನೆಚ್ಚರಿಕೆಯಾಗಿ ಪ್ರತಿಭಟನೆಗಳನ್ನು ನಿಷೇಧಿಸುವಂತೆ ಸೂಚಿಸಿದೆ. ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಆಯಾ ಸ್ಥಳಗಳಲ್ಲಿ ಇಂತಹ ಪ್ರತಿಭಟನೆಗಳನ್ನು ತಡೆಯಲು ಕಟ್ಟುನಿಟ್ಟಿನ ನಿಗಾ ವಹಿಸುವಂತೆ ರಾಜ್ಯಗಳ ಗೃಹ ಕಾರ್ಯದರ್ಶಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಈ ನಡುವೆ, ದೆಹಲಿಯ ಜಂತರ್ ಮಂತರ್‌ನ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪ್ರತಿಭಟನಾ ಸ್ಥಳದಿಂದ ಮಾಹಿತಿ ಹೊರಗೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಶುಕ್ರವಾರ ರಾತ್ರಿ 9 ಗಂಟೆಯಿಂದ ಇಂದಿನ ಸಂಜೆ 6 ಗಂಟೆಯವರೆಗೆ ಯಾವುದೇ ಇಂಟರ್ನೆಟ್ ಸೌಲಭ್ಯ ಲಭ್ಯವಿರುವುದಿಲ್ಲ ಎಂದು ತಿಳಿದುಬಂದಿದೆ.